ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭಾವಚಿತ್ರವನ್ನು ವಿರೂಪಗೊಳಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಮೂಲಕ ಬಂಧನಕ್ಕೊಳಗಾಗಿದ್ದ ಬಿಜೆಪಿ ಯುವ ಘಟಕದ ಕಾರ್ಯಕರ್ತೆ ಪ್ರಿಯಾಂಕ ಶರ್ಮಾಗೆ ಸುಪ್ರೀಂ ಕೋರ್ಟ್ ಇಂದು ಶರತ್ತುಬದ್ಧ ಜಾಮೀನು ನೀಡಿದೆ.
ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ಸಂಜೀವ್ ಖನ್ನಾ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿ ತೀರ್ಪು ನೀಡಿದ್ದು, ಪ್ರಿಯಾಂಕಾ ಶರ್ಮಾ ಮಮತಾ ಬ್ಯಾನರ್ಜಿ ಅವರ ಬಳಿ ಲಿಖಿತವಾಗಿ ಕ್ಷಮೆಯಾಚಿಸಬೇಕು ಎಂದು ಹೇಳಿದೆ.
ಅಭಿವ್ಯಕ್ತಿ ಸ್ವಾತಂತ್ರದ ಉಲ್ಲಂಘನೆಯ ಕುರಿತು ನ್ಯಾಯಾಲಯದ ರಜಾವಧಿ ಮುಗಿದ ನಂತರ ವಿಚಾರಣೆ ನಡೆಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಇದೇ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ನೋಟಿಸ್ ನೀಡಿರುವ ಸುಪ್ರೀಂ ಕೋರ್ಟ್ ‘ಶರ್ಮಾ ಅವರನ್ನು ಹೇಗೆ ಬಂಧನಕ್ಕೊಳಪಡಿಸಲಾಯಿತು ಎಂಬ ಬಗ್ಗೆ ವರದಿ ನೀಡಬೇಕು’ ಎಂದು ಆದೇಶಿಸಿದೆ.
ಘಟನೆ ಹಿನ್ನೆಲೆ
ನಟಿ ಪ್ರಿಯಾಂಕಾ ಚೋಪ್ರಾ ಅವರು ಮೆಟ್ ಗಾಲಾದಲ್ಲಿ ಕಾಣಿಸಿಕೊಂಡಂತೆ ಮಮತಾ ಬ್ಯಾನರ್ಜಿ ಅವರ ಭಾವಚಿತ್ರವನ್ನು ವಿರೂಪಗೊಳಿಸಿದ್ದ ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಈ ಸಂಬಂಧ ಪ್ರಿಯಾಂಕರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಇಂದು ನಿಗದಿಯಾಗಿತ್ತು. ಪ್ರಿಯಾಂಕ ಬಂಧನ ಖಂಡಿಸಿ ಪ.ಬಂಗಾಳ ರಾಜ್ಯ ಸರ್ಕಾರದ ನಡೆಯ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಲಾಗಿತ್ತು.
‘ದೀದಿ’ ಭಾವಚಿತ್ರ ವಿರೂಪಗೊಳಿಸಿದ್ದ ಪ್ರಿಯಾಂಕಾ ಶರ್ಮಾಗೆ ‘ಸುಪ್ರೀಂ’ ಜಾಮೀನು
ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ಸಂಜೀವ್ ಖನ್ನಾ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿ ತೀರ್ಪು ನೀಡಿದ್ದು, ಪ್ರಿಯಾಂಕಾ ಶರ್ಮಾ ಮಮತಾ ಬ್ಯಾನರ್ಜಿ ಅವರ ಬಳಿ ಲಿಖಿತವಾಗಿ ಕ್ಷಮೆಯಾಚಿಸಬೇಕು ಎಂದು ಹೇಳಿದೆ.
