ನವದೆಹಲಿ: “ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದರು; ಅದನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ, ಒಂದೇ ಮಾತಿನಲ್ಲಿ ತಿರಸ್ಕರಿಸಿದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದರು. ಇಂದು ನವ ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯ ನಂತರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.
“ಸಧ್ಯದ ಸವಾಲಿನ ಸನ್ನಿವೇಶದಲ್ಲಿ ನಮಗೆ ರಾಹುಲ್ ಗಾಂದಿಯವರ ಮಾರ್ಗದರ್ಶನ ಬೇಕಿದೆ” ಎಂಬುದು ಕಾರ್ಯಕಾರಿ ಸಮಿತಿಯ ಒಕ್ಕೊರಲಿನ ಅಭಿಪ್ರಾಯವಾಗಿದೆ” ಎಂದು ಅವರು ಹೇಳಿದರು.
ಮೇ 23ರಂದು ಪ್ರಕಟವಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಪಡೆದು ಭಾರೀ ಮುಖಭಂಗ ಅನುಭವಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುಕ್ಕಾಣಿ ಹಿಡಿದಿರುವ ರಾಹುಲ್ ಗಾಂಧಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವರೇ ಎಂಬ ಪ್ರಶ್ನೆ ಕೇಳಿಬಂದಿತ್ತು.
“ಸುಮಾರು ನಾಲ್ಕು ತಾಸು ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್ ಸೋಲಿನ ಕಾರಣಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಯಿತು. ಬರುವ ದಿನಗಳಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಪುನರಚಿಸುವ ಹೊಣೆಯನ್ನು ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ನೀಡಲಾಯಿತು” ಎಂದು ಸುರ್ಜೇವಾಲಾ ತಿಳಿಸಿದರು.
ಕಾಂಗ್ರೆಸ್ ಮುಖಂಡ ಎ ಕೆ ಆಂಟನಿ, ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.