ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಸಚಿವ ಸಂಪುಟಕ್ಕೆ ಇಬ್ಬರು ಪಕ್ಷೇತರ ಶಾಸಕರನ್ನು ಸೇರಿಸಿಕೊಂಡಿದ್ದಾರೆ. ಇಂದು ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಣೆಬೆನ್ನೂರಿನ ಪಕ್ಷೇತರ ಶಾಸಕ ಆರ್. ಶಂಕರ್ ಹಾಗೂ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್ ನಾಗೇಶ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕರನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ ಹಾಗೂ ರಾಜ್ಯಪಾಲರು ಹೂಗುಚ್ಛ ನೀಡಿ ಅಭಿನಂದಿಸಿದರು.
ಈ ಹಿಂದೆ ಸಚಿವರಾಗಿ ಕೆಲಸ ಮಾಡಿರುವ ರಾಣೆಬೆನ್ನೂರು ಪಕ್ಷೇತರ ಶಾಸಕ ಆರ್.ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ. ಎಚ್ ಶಂಕರ್ ಅವರು ಈ ಹಿಂದೆ ತಾವು ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಂಡು ಬಿಜೆಪಿ ಪಕ್ಷ ಸೇರುವುದಾಗಿ ಹೇಳುತ್ತಾ ಬಂದಿದ್ದರು. ಇಬ್ಬರೂ ಶಾಸಕರೂ ಈಗ ತಾವು ಸಂಪುಟ ದರ್ಜೆಯ ಸಚಿವರಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.